ಮೈಸೂರು- ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯವನ್ನು ಬೆಂಗಳೂರಿನಲ್ಲಿ ನಡೆಸುವ ಕುರಿತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಜೊತೆಗೆ ಈಗಾಗಲೇ ಮಾತುಕತೆ ನಡೆಸಲಾಗಿದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಅಧ್ಯಕ್ಷ ವೆಂಕಟೇಶ್ ಪ್ರಸಾದ್ ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, “ಬಿಸಿಸಿಐ ಕೂಡ ಈ ಬಾರಿ ಐಪಿಎಲ್ ಉದ್ಘಾಟನಾ ಪಂದ್ಯವನ್ನು ಬೆಂಗಳೂರಿನಲ್ಲಿ ನಡೆಸುವ ಬಗ್ಗೆ ಚರ್ಚೆ ನಡೆಸುತ್ತಿದೆ. ಪ್ರತಿವರ್ಷ ಐಪಿಎಲ್ ಟ್ರೋಫಿ ಗೆದ್ದ ತಂಡದ ಹೋಂ ಗ್ರೌಂಡ್‌ನಲ್ಲೇ ಉದ್ಘಾಟನಾ ಪಂದ್ಯ ನಡೆಯುವ ಪದ್ಧತಿ ಇತ್ತು. ಆದರೆ ಈ ಬಾರಿ ಕೆಲವು ವಿಶೇಷ ಪರಿಸ್ಥಿತಿಗಳ ಹಿನ್ನೆಲೆ ಬೆಂಗಳೂರು ಆಯ್ಕೆಯಾಗುವ ಸಾಧ್ಯತೆ ಇದೆ” ಎಂದು ಹೇಳಿದರು.
ಆರ್‌ಸಿಬಿ ಸಂಭ್ರಮಾಚರಣೆ ವೇಳೆ ನಡೆದ ಘಟನೆಯಿಂದ ಸಾಕಷ್ಟು ಗೊಂದಲಗಳು ಉಂಟಾಗಿದ್ದವು. ಈ ಹಿನ್ನೆಲೆ ನಮ್ಮ ತಂಡ ಚುನಾವಣೆ ಗೆದ್ದ ಬಳಿಕ ರಾಜ್ಯ ಸರ್ಕಾರದ ಜೊತೆ ಚರ್ಚೆ ನಡೆಸಲಾಗಿದೆ. ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಈಗಾಗಲೇ ಪಂದ್ಯಾವಳಿ ನಡೆಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಗೃಹ ಸಚಿವರ ಜೊತೆಯೂ ಫೋನ್ ಮೂಲಕ ಮಾತುಕತೆ ನಡೆಸಿದ್ದೇನೆ. ಶೀಘ್ರದಲ್ಲೇ ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯದ ದಿನಾಂಕ ನಿಗದಿಯಾಗಲಿದೆ ಎಂದು ವೆಂಕಟೇಶ್ ಪ್ರಸಾದ್ ತಿಳಿಸಿದರು.
“ಬೆಂಗಳೂರಿನಲ್ಲಿ ಐಪಿಎಲ್ ಮಾತ್ರವಲ್ಲದೆ ಅಂತರಾಷ್ಟ್ರೀಯ ಸೇರಿದಂತೆ ಎಲ್ಲಾ ಮಾದರಿಯ ಪಂದ್ಯಗಳನ್ನು ಆಯೋಜಿಸುವ ಸಾಮರ್ಥ್ಯವಿದೆ. ಚಿನ್ನಸ್ವಾಮಿ ಕ್ರೀಡಾಂಗಣ ಸೇರಿದಂತೆ ಮೂರು ಪ್ರಮುಖ ಕ್ರೀಡಾಂಗಣಗಳು ಬೆಂಗಳೂರಿನಲ್ಲಿವೆ” ಎಂದರು.
ಇನ್ನೂ ವಿಜಯ್ ಹಜಾರೆ ಟ್ರೋಫಿ ಕುರಿತು ಮಾತನಾಡಿದ ಅವರು, “ಈ ಪಂದ್ಯಾವಳಿಗಾಗಿ ವಿರಾಟ್ ಕೊಹ್ಲಿ ಬೆಂಗಳೂರಿಗೆ ಬರಲಿದ್ದಾರೆ. ಈ ಬಾರಿ ಅವರು ಡೆಲ್ಲಿ ತಂಡದಿಂದ ಆಡಲಿದ್ದಾರೆ. ಪಂದ್ಯ ಯಾವ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂಬ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ” ಎಂದು ಸ್ಪಷ್ಟಪಡಿಸಿದರು.
ಮೈಸೂರಿನಲ್ಲಿ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣದ ಕುರಿತು ಸಹ ಮಾತುಕತೆಗಳು ನಡೆಯುತ್ತಿವೆ ಎಂದು ಹೇಳಿದ ವೆಂಕಟೇಶ್ ಪ್ರಸಾದ್, “ಕಳೆದ ಮೂರು ವರ್ಷಗಳಿಂದ ಕ್ಲಬ್‌ನಲ್ಲಿ ಸಾಕಷ್ಟು ಗೊಂದಲಗಳಿದ್ದವು. ಅವುಗಳನ್ನೆಲ್ಲಾ ನಮ್ಮ ತಂಡ ಬಗೆಹರಿಸಿ, ಉತ್ತಮ ಕ್ರಿಕೆಟ್ ಅಭಿವೃದ್ಧಿಗೆ ಆದ್ಯತೆ ನೀಡಲಿದೆ” ಎಂದು ಹೇಳಿದರು.
